ಶ್ರವಣಬೆಳಗೊಳ, ಜು 30 (Daijiworld News/MSP): ರಾಜ್ಯ ಬಿಜೆಪಿ ಸರ್ಕಾರಕ್ಕೆ ವರ್ಷ ಭರ್ತಿಯಾದ ಬೆನ್ನಲ್ಲೇ ಸಂಪುಟ ಸರ್ಜರಿ ಹಾಗೂ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಆದರೆ ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ಎಲ್ಲವೂ ಊಹಾಪೋಹಗಳಾಗಿದ್ದು, ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆಯ ಚರ್ಚೆಗೆ ತೆರೆ ಎಳೆದಿದ್ದಾರೆ.
ಇದೇ ವೇಳೆ ಕೊವೀಡ್ ಸಾಂಕ್ರಮಿಕ ರೋಗದ ಸಂಕಷ್ಟದ ಕಾಲಘಟ್ಟದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, 60 ವರ್ಷಗಳ ಕಾಲ ದೇಶವನ್ನು ಆಳುತ್ತಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ನೇಮಕ ಮಾಡುವಲ್ಲಿ ವಿಫಲವಾದವರಿಗೆ ಬಿಜೆಪಿಯನ್ನು ಟೀಕಿಸುವ, ದೂಷಿಸುವ ನೈತಿಕ ಹಕ್ಕು ಇಲ್ಲ ಎಂದು ಕಿಡಿಕಾರಿದ್ದಾರೆ.