ಬೆಂಗಳೂರು, ಆ 1 (Daijiworld News/MSP): ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತಮಟ್ಟದ ತನಿಖೆ ಆದೇಶಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪಿ.ಎಸ್.ಐ ಕಿರಣ್ಕುಮಾರ್ ಆತ್ಮಹತ್ಯೆ ಪ್ರಕರಣ ಬಗ್ಗೆ ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, " ಈ ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಸರ್ಕಾರ ಈಗ ಮೌನಕ್ಕೆ ಶರಣಾಗಿರುವುದೇಕೆ" ಎಂದು ಅವರು ಪ್ರಶ್ನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ. ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ,ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಘಟನೆ ಹಿನ್ನಲೆ:
ಕಿರಣ್ ಅವರು ಕಳೆದ ಒಂದು ವರ್ಷದಿಂದ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು , ಚನ್ನರಾಯಪಟ್ಟಣದಲ್ಲಿ ಕಳೆದು ಎರಡು ದಿನಗಳ ಹಿಂದೆ ಎರಡು ಕೊಲೆಗಳಾಗಿತ್ತು. ಕಿರಣ್ ಅವರು ಈ ಕೊಲೆಗಳ ಜಾಡು ಹಿಡಿದಿದ್ದರು. ಮಧ್ಯ ರಾತ್ರಿಯಷ್ಟೇ ಒಂದು ಕೊಲೆ ಪ್ರಕರಣ ಭೇದಿಸಿದ್ದ ಅವರು, ಆರೋಪಿಯನ್ನು ಬಂಧಿಸಿ ಕೊಲೆ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಬೆಳಿಗ್ಗೆ ಶುಕ್ರವಾರ 9 ಗಂಟೆ ಸುಮಾರಿಗೆ ಮನೆಗೆ ಬಂದು ಸಮವಸ್ತ್ರದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದರು.