ನವದೆಹಲಿ, ಆ 01 (DaijiworldNews/PY): ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಯು ಆ.5ರಂದು ನಡೆಯಲಿದ್ದು, ಕೇಂದ್ರ ಸಚಿವೆ ಉಮಾ ಭಾರತಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಆದರೆ, ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಆಹ್ವಾನಿಸಲಾಗಿಲ್ಲ ಎನ್ನಲಾಗಿದೆ.
ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರು ಕಳೆದ ವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಬರಿ ಮಸೀದಿ ದ್ವಂಸಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳಿಗೆ ಉತ್ತರಿಸಲು ಲಕ್ನೋದ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಿದ್ದು, ಅವರನ್ನು ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ತಿಳಿದುಬಂದಿದೆ.
ಬಾಬರಿ ಮಸೀದಿ ದ್ವಂಸಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಅವರಿಗೆ ನಾಲ್ಕು ಗಂಟೆಗಳಲ್ಲಿ ಸುಮಾರು 1000ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದ್ದು, ಈ ವೇಳೆ ಅವರ ವಿರುದ್ದವಾಗಿದ್ದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ ಎಂಬುದಾಗಿ ವಕೀಲರು ಹೇಳಿದ್ದಾರೆ.
ಅಡ್ವಾಣಿ ಅವರೊಂದಿಗೆ ಪಕ್ಷದ ಮತ್ತೋರ್ವ ಹಿರಿಯ ಮುಖಂಡರಾದ ಮುರಳಿ ಮನೋಹರ್ ಜೋಷಿ ಅವರನ್ನು ಕೂಡಾ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿಲ್ಲ ಎಂದು ತಿಳಿದುಬಂದಿದೆ.