ನವದೆಹಲಿ, ಆ. 04 (DaijiworldNews/MB) : ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಪಡಿಸಿ ಆಗಸ್ಟ್ 5 ರಂದು ಒಂದು ವರ್ಷವಾಗುತ್ತಿದ್ದು ಮಂಗಳವಾರದಿಂದ ಎರಡು ದಿನಗಳ ಕಾಲ ಕಾಶ್ಮೀರ ಕಣಿವೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಶ್ರೀನಗರದಲ್ಲಿ ಸೋಮವಾರ ನಡೆದ ಭದ್ರತಾ ಕಮಿಟಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದ್ದು ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರ ಅಧ್ಯಕ್ಷತೆಯಲ್ಲಿ ಸೇನೆಯ ಶ್ರೀನಗರದ ಜಿಒಸಿ ಪ್ರಧಾನ ಕಚೇರಿಯಲ್ಲಿ ಈ ಸಭೆ ನಡೆದಿದೆ.
ಪ್ರತ್ಯೇಕತಾವಾದಿಗಳು ಮತ್ತು ಪಾಕಿಸ್ತಾನ ಪ್ರಾಯೋಜಿತ ಗುಂಪುಗಳು ಹಿಂಸಾತ್ಮಕ ಪ್ರತಿಭಟನೆಯನ್ನು ನಡೆಸಲು ಯೋಜಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯ ಉಂಟಾಗುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ವೈದ್ಯಕೀಯ ತುರ್ತುಸ್ಥಿತಿಗಳು ಮತ್ತು ಮಾನ್ಯ ಗುರುತಿನ ಚೀಟಿ ಮತ್ತು ಪಾಸ್ಗಳನ್ನು ಹೊಂದಿರುವ ಸರ್ಕಾರಿ ಸಿಬ್ಬಂದಿಗಳಿಗೆ ಮಾತ್ರ ಈ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ.
ಇನ್ನು ಈಗಾಗಲೇ ಶ್ರೀನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.