ಅಹಮದಾಬಾದ್, ಆ. 06 (DaijiworldNews/HR):ಅಹಮದಾಬಾದ್'ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾದ ಘಟನೆ ನಡೆದಿದೆ.
ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು.
ಆಸ್ಪತ್ರೆಯ ಐಸಿಯುವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗಿಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ.
ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಅತೀ ಶೀಘ್ರ ಗುಣಮುಖರಾಗಲಿ ತೀವ್ರ ಸಂತಾಪ ಸೂಚಿಸಿದ್ದಾರೆ.