ಬೆಂಗಳೂರು, ಆ 7 (Daijiworld News/MSP): ಒಂದೆಡೆ ಸಾಂಕ್ರಮಿಕ ರೋಗ ಕೊರೊನಾ ಸೃಷ್ಟಿಸಿರುವ ಅವಾಂತರ, ಮತ್ತೊಂದೆಡೆ ರಾಜ್ಯದಲ್ಲಿ ಅತಿವೃಷ್ಟಿಯಾಗಿ ನೆರೆಪೀಡಿತ ಪರಿಸ್ಥಿತಿ ಎದುರಾಗಿದ್ದು, ಈ ಸಮಯದಲ್ಲಿ ಸರ್ಕಾರ ಕೊಂಚ ಎಚ್ಚರ ತಪ್ಪಿದ್ದರೂ ಜನರ ಬದುಕು ಮೂರಾಬಟ್ಟೆಯಾಗುವುದು ಖಂಡಿತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು" ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ.
ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.
ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸುತ್ತೇನೆ" ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.