ಕೋಝಿಕೋಡು, ಆ. 08 (DaijiworldNews/MB) : ಕೇರಳದ ಕೋಝಿಕೋಡಿನಲ್ಲಿ ಶುಕ್ರವಾರ ನಡೆದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ತಲಾ 10 ಲಕ್ಷ ಪರಿಹಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ.
ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೋಝಿಕೋಡು ರನ್ವೇಯಿಂದ ಜಾರಿ ಪ್ರಪಾತಕ್ಕೆ ಉರುಳಿದ್ದು ದುರಂತದಲ್ಲಿ ಈವರೆಗೆ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ದುರಂತದಲ್ಲಿ ಸಾವನ್ನಪ್ಪಿದವರಿಗೆ ತಲಾ 10 ಲಕ್ಷ ಪರಿಹಾರ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ, ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ತನಿಖೆ ನಡೆಸುತ್ತಿದೆ. ಈ ದುರಂತದ ಬಗ್ಗೆ ಹಿರಿಯ ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವೃತ್ತಿಪರರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.