ಬೆಂಗಳೂರು, ಆ. 10 (DaijiworldNews/MB) : ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ, ದ.ಕ. ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆಯು ಆ.13ರವರೆಗೂ ಮುಂದುವರೆಯಲಿದೆ ಎಂದು ವರದಿಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ಹಿನ್ನೆಲೆ ಕೆಲವು ಜಿಲ್ಲೆಗಳಲ್ಲಿ ಆ.11ರಂದು ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರವಾತಿ ನದಿಯು ಅಪಾಯದ ಮಟ್ಟ ಮೀರಿದೆ. ಕರಾವಳಿ ಭಾಗದ ಸಮುದ್ರಗಳಲ್ಲಿ ಅಲೆಗಳ ರಭಸವೂ ಕೂಡಾ ಹೆಚ್ಚಾಗಿದ್ದು ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಕೊಡಗಿನಲ್ಲಿ ಕಳೆದ ವರ್ಷದ ಪ್ರವಾಹವನ್ನು ನೆನಪಿಸುವಂತೆ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ನಿರ್ಬಂಧ ಹೇರಲಾಗಿದೆ.