ಬೆಂಗಳೂರು, ಆ 10(DaijiworldNews/HR): ರಾಜ್ಯದಲ್ಲಿ ಈ ಭಾರಿಯ ಮಳೆಯಿಂದ ಹಾನಿಯದ ಪರಿಸ್ಥಿತಿಯನ್ನು ಪ್ರಧಾನಿ ಮೋದಿಯವರ ಮುಂದೆ ಧೈರ್ಯ ಮಾಡಿ ವಿವರಿಸಿ, ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅತಿವೃಷ್ಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಒಳ್ಳೆಯ ವಿಷಯವಾಗಿದೆ. ಯಾಕೆಂದರೆ ಕಳೆದ ವರ್ಷ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ಗಮನ ಹರಿಸದ ಪ್ರಧಾನಿ ಈ ಬಾರಿ ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ ಈ ಅವಕಾಶವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಇನ್ನು ಪ್ರಧಾನಿ ಮೋದಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ 1 ಲಕ್ಷ ಕೋಟಿ. ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ-50 ಸಾವಿರ ಕೋಟಿ. ಪರಿಹಾರ ಕೇಳಿದ್ದು 35ಸಾವಿರ ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ ಆಗಿದ್ದುಉಳಿದ ಬಾಕಿಯನ್ನೂ ಕೇಳುವ ಧೈರ್ಯ ಮಾಡಬೇಕು ಎಂದು ಹೇಳಿದರು.
ಇನ್ನು ನರೇಂದ್ರ ಮೋದಿ ನಿನ್ನೆ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್ ಕುರಿತು ಟ್ವೀಟ್ ಮಾಡಿದ ಅವರು, ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಹೀಗಾಗಿ ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.