ನವದೆಹಲಿ, ಆ 10 (DaijiworldNews/PY): ಕೋಝಿಕ್ಕೋಡ್ ವಿಮಾನ ಅಪಘಾತದಲ್ಲಿ ಗಾಯಗೊಂಡಿದ್ದ 56 ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಸೋಮವಾರ ತಿಳಿಸಿದೆ.
ಶನಿವಾರ 149 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 23 ಜನರನ್ನು ಬಿಡುಗಡೆ ಮಾಡಲಾಗಿದೆ. ವಿಮಾನ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಶುಕ್ರವಾರ 184 ಮಂದಿ ಪ್ರಯಾಣಿಕರನ್ನು ಹೊತ್ತು ದುಬೈಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಕೋಝಿಕೋಡು ರನ್ವೇಯಿಂದ ಜಾರಿ ಪ್ರಪಾತಕ್ಕೆ ಉರುಳಿದ್ದು ದುರಂತದಲ್ಲಿ ಪೈಲಟ್ ಮತ್ತು ಸಹ ಪೈಲಟ್ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ
ಏರ್ ಇಂಡಿಯಾ ಎಕ್ಸ್ಪ್ರೆಸ್ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರರು ಕುಟುಂಬ ಸದಸ್ಯರಿಗೆ ಬೆಂಬಲ ನೀಡುವ ಸಲುವಾಗಿ ಕೋಝಿಕ್ಕೋಡ್ನಲ್ಲೇ ಉಳಿದಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ವಿಮಾನ ಅಪಘಾತದಲ್ಲಿ ಗಾಯಗೊಂಡಿದ್ದ 56 ಪ್ರಯಾಣಿಕರು ಸಂಪೂರ್ಣ ಚೇತರಿಸಿಕೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.
ವಿಮಾನ ಅಪಘಾತದಲ್ಲಿ ಮೃತಪಟ್ಟ 16 ಪ್ರಯಾಣಿಕರ ಮೃತದೇಹವನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಅಪಘಾತದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಭಾನುವಾರ ತಿಳಿಸಿದೆ ಎಂದು ಹೇಳಿದರು.