ನವದೆಹಲಿ, ಆ. 11 (DaijiworldNews/MB) : ಆಗಸ್ಟ್ 15 ರ ನಂತರ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗಳ ಆರಂಭಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಮಂಗಳವಾರ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ ಬಳಿಕ ಅಲ್ಲಿ 4ಜಿ ಇಂಟರ್ನೆಟ್ ರದ್ದು ಮಾಡಲಾಗಿದ್ದು ನಿರ್ದಿಷ್ಟ ಪ್ರದೇಶಗಳಲ್ಲಿ 4ಜಿ ಸೇವೆಗಳನ್ನು ಮತ್ತೆ ಆರಂಭ ಮಾಡುವ ಸಾಧ್ಯತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ಜಮ್ಮು ಕಾಶ್ಮೀರದ ಆಡಳಿತಕ್ಕೆ ಆಗಸ್ಟ್ 7 ರಂದು ಸುಪ್ರೀಂಕೋರ್ಟ್ ಸೂಚಿಸಿತ್ತು.
ಈ ಬಗ್ಗೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ್ದು ಆಗಸ್ಟ್ 15 ರ ನಂತರ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 4ಜಿ ಇಂಟರ್ನೆಟ್ ಸೇವೆಗಳ ಆರಂಭಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಹಾಗೆಯೇ ಅಂತರ್ ರಾಷ್ಟ್ರೀಯ ಗಡಿ ಅಥವಾ ಗಡಿ ನಿಯಂತ್ರಣ ರೇಖೆಯ ಬಳಿಯ ಪ್ರದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ, ಉಗ್ರರ ಚಟುವಟಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಮಾತ್ರವೇ 4ಜಿ ಇಂಟರ್ನೆಟ್ ದೊರೆಯಲಿದೆ. ಎರಡು ತಿಂಗಳ ಬಳಿಕ ಸರ್ಕಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.