ಬೆಂಗಳೂರು, ಆ 12 (DaijiworldNews/PY): ಬೆಂಗಳೂರು ಗಲಭೆ ಪ್ರಕರಣದ ತನಿಖೆಯನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ನಡೆಸುವಂತೆ ಸಿಎಂ ಬಿಎಸ್ವೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಗಲಭೆಯ ಸಂದರ್ಭ ಬೈಕ್ಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೇ, ಪರಿಸ್ಥಿತಿಯನ್ನು ನಿಯಂತ್ರಣ ಮಾಡಲು ಪೊಲೀಸರು ಗೋಲಿಬಾರ್ ನಡೆಸಿದ್ದು, ಈ ವೇಳೆ ಮೂರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ನಡೆಯಲು ಯಾರು ಕಾರಣ ಎನ್ನುವುದರ ವಿಚಾರವಾಗಿ ತನಿಖೆ ಮಾಡಲು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ ಆಗಲಿದೆ ಎಂದಿದ್ದಾರೆ.
ಸಿಎಂ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರು ಸಭೆ ನಡೆಸಿದ್ದು, ಪ್ರಕರಣದ ವಿಚಾರವಾಗಿ ತನಿಖೆ ನಡೆಸುವಂತೆ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಬಿಎಸ್ವೈ ತಿಳಿಸಿದ್ದರು.