ಬೆಂಗಳೂರು, 13(DaijiworldNews/HR): ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಲಭೆ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ಆಗಸ್ಟ್ 15ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
144 ಸೆಕ್ಷನ್ ಜಾರಿಗೊಳಿಸಿದ್ದರಿಂದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಗಲಭೆಯಲ್ಲಿ ಗೋಲಿಬಾರ್ ನಿಂದಾಗಿ ಮೂರು ಜನ ಮೃತಪಟ್ಟಿದ್ದು. ಈವರೆಗೆ 146 ಗಲಭೆಕೋರರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ತೀರ್ಮಾನಿಸಿದೆ.
ಮಂಗಳವಾರ ರಾತ್ರಿ ಬೆಂಗಳೂರು ಪುಲಕೇಶಿ ನಗರದಲ್ಲಿ ಏಕಾಏಕಿ ಒಂದು ಸಮುದಾಯದ ಗುಂಪು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು. ಶಾಸಕರ ಸಂಬಂಧಿ ನವೀನ್ ಎಂಬ ಯುವಕ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು ಗಲಭೆ ನಡೆಯಲು ಕಾರಣವಾಗಿತ್ತು.