ಬೆಂಗಳೂರು, ಆ 13 (DaijiworldNews/PY): ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ ಎಂದಿದ್ದಾರೆ.
ಆಗಸ್ಟ್ 3ರಂದು ಸಿದ್ದರಾಮಯ್ಯ ಅವರು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿ ಕೊರೊನಾ ಪಾಸಿಟಿವ್ ಬಂದಿತ್ತು. ಕಳೆದ 10 ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡನೇ ಬಾರಿ ಕೊರೊನಾ ಪರೀಕ್ಷೆ ನಡೆಸಿದ ಸಂದರ್ಭ ನೆಗೆಟಿವ್ ಬಂದಿದ್ದು, ಇಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.