ನವದೆಹಲಿ, ಆ 14 (DaijiworldNews/PY): ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ. ನಾನು ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಯದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಶುಭ ಹಾರೈಸುವ ಮೂಲಕ ಆಶೀರ್ವದಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿ ಕ್ವಾರಂಟೈನ್ನಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ನನಗೆ ನೆರವಾದ ಹಾಗೂ ನನಗೆ ಚಿಕಿತ್ಸೆ ನೀಡುತ್ತಿರುವ ಮೆಗಂತಾ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳಿಗೆ ನನ್ನ ಧನ್ಯವಾದ ಎಂದಿದ್ದಾರೆ.
ಅಮಿತ್ ಶಾ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಅವರು ದೆಹಲಿಯ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.