ಬೆಂಗಳೂರು, ಆ 20 (DaijiworldNews/PY): ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆಡಿದ ಮಾತು, ಬಿಟ್ಟ ಬಾಣ, ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೆಚ್ಡಿಕೆ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ರೈತರಿಗೂ ಯೂರಿಯಾ ಗೊಬ್ಬರ ಪೂರೈಸುವಲ್ಲಿ ಸಶಕ್ತವಾಗಿದೆ. ಆಡಿದ ಮಾತು ಬಿಟ್ಟ ಬಾಣ ಕಳೆದ ಸಮಯ ಮತ್ತು ಕೈತಪ್ಪಿ ಹೋದ ಅವಕಾಶ ಇವು ಎಂದಿಗೂ ಮರಳಿ ಬಾರವು ಎಂದಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದಿದ್ದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಹೆಚ್ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದರು.