ಬೆಂಗಳೂರು, ಆ. 22(DaijiworldNews/HR): ಆಗಸ್ಟ್ 11 ರಂದು ಡಿ.ಜೆ.ಹಳ್ಳಿ ಕೆ ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಬಿಜೆಪಿಮತ್ತು ಕಾಂಗ್ರೆಸ್ಗೆ ಬಹಿರಂಗವಾಗಿ ಪತ್ರವೊಂದನ್ನು ಬರೆದಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ, ವಿಪಕ್ಷ ಜವಾಬ್ದಾರಿಯುತ ನಡವಳಿಕೆಯನ್ನು ಪ್ರದರ್ಶಿಸುವ ಬದಲಾಗಿ ಗಲಭೆಯ ಘಟನೆಯನ್ನೇ ನೆಪವಾಗಿಟ್ಟುಕೊಂಡು ಕೆಸರೆರಚಾಟದಲ್ಲಿ ತೊಡಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಗಲಭೆಯ ವಿಚಾರವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಯಾಗಿದ್ದು, ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಆದರೆ, ಈ ಘಟನೆಯನ್ನೇ ನೆಪವಾಗಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆಯನ್ನು ಬಿಜೆಪಿ ಕಾಂಗ್ರೆಸ್ ಪಕ್ಷಗಳೆರಡೂ ಕಳೆದುಕೊಂಡೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿರುವ ಅವರು, ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತು ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಬೇರೆ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್, ಪೌರತ್ವ ತಿದ್ದುಪಡಿ ಕಾಯ್ದೆಯಂಥ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ ಹಾಗಾದರೆ ಕಾಂಗ್ರೆಸ್ ಕ್ರೈಂ ಸಂಭವಿಸಿದಾಗ ಮಾತ್ರವೇ ಅಲ್ಪಸಂಖ್ಯಾತರ ರಕ್ಷಣೆ ಕಾಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.