ಬೆಂಗಳೂರು, ಆ. 23 (DaijiworldNews/MB) : ''ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ದುರ್ಬಲಗೊಳಿಸುವುದಲ್ಲ'' ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷದ ಮುಖಂಡರು ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಐದು ಹಿರಿಯ ಮುಖ್ಯಮಂತ್ರಿಗಳು, ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸದಸ್ಯರು, ಲೋಕಸಭಾ ಸದಸ್ಯರು, ಮಾಜಿ ಕೇಂದ್ರ ಮಂತ್ರಿಗಳು ಸೇರಿದಂತೆ 23 ಮುಖಂಡರು ಸೋನಿಯಾ ಅವರಿಗೆ ಬರೆದ ಪತ್ರದಲ್ಲಿ ಸಹಿ ಮಾಡಿದ್ದಾರೆ.
ಈಗಾಗಲೇ ಸೋಮವಾರ ಆಗಸ್ಟ್ 24 ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಆಂತರಿಕ ಸಭೆಯ ಸಂದರ್ಭದಲ್ಲಿ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಯುವುದಾಗಿ ಸೋನಿಯಾ ಗಾಂಧಿಯವರು ಹೇಳಿದ್ದಾರೆ. ಹಾಗೆಯೇ ನೂತನ ಅಧ್ಯಕ್ಷ ಸ್ಥಾನವನ್ನು ವಹಿಸುವವರು ಗಾಂಧಿ ಕುಟುಂಬದ ಹೊರಗಿನವರು ಆಗಿರಬೇಕು ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ, ''ಗಾಂಧಿ ಕುಟುಂಬಕ್ಕೆ ಸೇರಿರದ ವ್ಯಕ್ತಿ ಅಧ್ಯಕ್ಷರಾಗಲಿ, ಅವರ ಯಾವುದೇ ಆದೇಶ ಪಾಲಿಸಲು ನಾನು ಸಿದ್ಧ'' ಎಂದು ಪ್ರಿಯಾಂಕ ಗಾಂಧಿ ಅವರು ಹೇಳಿದ್ದರು.