ಬೆಂಗಳೂರು, ಆ. 24 (DaijiworldNews/MB) : ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆರಂಭವಾಗಿದ್ದು ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ''ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ'' ಎಂದು ಹೇಳಿದ್ದಾರೆ.
ಹಾಗೆಯೇ ''ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು'' ಎಂದಿದ್ದಾರೆ.
ಕಾಂಗ್ರೆಸ್ನಲ್ಲಿ ಹಂಗಾಮಿ ಅಧ್ಯಕ್ಷೆಯಾಗಿರುವ ಸೋನಿಯ ಗಾಂಧಿಯವರಿಗೆ ಇತ್ತೀಚೆಗೆ ಪಕ್ಷದ 23 ನಾಯಕರು ಪಕ್ಷದ ನಾಯಕತ್ವ ಬದಲಾವಣೆಗೆ ಸಂಬಂಧಿಸಿ ಪತ್ರ ಬರೆದಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸೋನಿಯಾ ಗಾಂಧಿ ತಾನು ಅಧ್ಯಕ್ಷ ಸ್ಥಾನದಿಂದ ಇಳಿಯಲು ಸಿದ್ದಳಿದ್ದೇನೆ, ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಹೇಳಿದ್ದರು.
ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದರು.