ರಾಯಗಡ, ಆ. 25 (DaijiworldNews/MB) : ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿ, ಹಲವಾರು ಮಂದಿ ಗಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ನಲ್ಲಿ ನಡೆದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೂ 60 ಮಂದಿಯನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಇಬ್ಬರು ಸಾವನ್ನಪ್ಪಿದ್ದು ಈ ಕಟ್ಟಡದ ಅವಶೇಷದಡಿ 18 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡದಲ್ಲಿ 45 ಫ್ಲ್ಯಾಟ್ ಗಳಿದ್ದವು ಎಂದು ಹೇಳಲಾಗಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ಕೂಡಾ ಆಗಮಿಸಿದ್ದು ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಶೀಘ್ರವೇ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.