ನವದೆಹಲಿ, ಆ 27 (DaijiworldNews/PY): ವಿಜಯ ಮಲ್ಯ ಅವರು ನ್ಯಾಯಾಂಗ ನಿಂದನೆಗೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಪುನರ್ ಪರಿಶೀಲನೆ ಅರ್ಜಿಯ ಬಗ್ಗೆ ಗುರುವಾರ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಹಾಗೂ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದ್ದು, ತೀರ್ಪು ಕಾಯ್ದಿರಿಸಿದ್ದಾರೆ.
ಸುಮಾರು 295.415 ಕೋಟಿ ಹಣವನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ತನ್ನ ಮಕ್ಕಳಿಗೆ ವರ್ಗಾವಣೆ ಮಾಡಿದ್ದಾರೆ ಎನ್ನುವ ಪ್ರಕರಣದಲ್ಲಿ ವಿಜಯ ಮಲ್ಯ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಸುಪ್ರೀಂ ಕೋರ್ಟ್ 2017ರಲ್ಲಿ ತೀರ್ಪು ನೀಡಿದ್ದು, ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪನ್ನು ಪುನರ್ ಪರಿಶೀಲನೆ ಮಾಡುವಂತೆ ವಿಜಯ ಮಲ್ಯ ಅರ್ಜಿ ಸಲ್ಲಿಸಿದ್ದರು.