ಸುತ್ತೂರು, ಆ 29(DaijiworldNews/HR): ನಮ್ಮ ದೇಶ ಹಾಗೂ ರಾಜ್ಯದ ದಿಕ್ಸೂಚಿಯನ್ನೇ ಬದಲಿಸಲು ಸಾಧ್ಯವಿರುವ ಶಕ್ತಿ ಹೊಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ನಾಡಿನ ಎಲ್ಲ ಮಹಾಸ್ವಾಮಿಗಳು ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿ ಈ ಕಾರ್ಯದಲ್ಲಿ ಸರ್ಕಾರದ ಕೈಹಿಡಿದು ಮುನ್ನಡೆಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಮನವಿ ಮಾಡಿಕೊಂಡಿದ್ದಾರೆ.
ಇಂದು ಸುತ್ತೂರು ಮಹಾಸಂಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಜಗದ್ಗುರು ಶ್ರೀ ಸುತ್ತೂರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಅವರ 105ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ʼಪ್ರಸಾದʼ ಮಾಸಪತ್ರಿಕೆಯನ್ನು ವರ್ಚುವಲ್ ವೇದಿಕೆ ಮೂಲಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಭಾರತ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಮೊತ್ತ ಮೊದಲಿಗೆ ರಾಜ್ಯದಲ್ಲಿ ಜಾರಿ ಮಾಡಲು ಸರಕಾರ ಮುಂದೆ ಬಂದಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು, ಜಾಗತಿಕ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ರೂಪಿಸಬೇಕು ಎಂಬ ಉದ್ದೇಶದಿಂದ ನೀತಿಯಲ್ಲಿ ಅಡಕವಾಗಿರುವ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಅಗತ್ಯವಿದೆ ಎಂದು ಹೇಳಿದರು.
ಇನ್ನು ಒಂದೆಡೆಗೆ ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗಲೇ, ಸುತ್ತೂರು ಮಠವು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ. ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರಗಳಲ್ಲಿ ಅತ್ಯಂತ ಉನ್ನತ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಅತ್ಯಂತ ಪ್ರಾಚೀನವಾದ ಶ್ರೀಮಠವು ಶಿಕ್ಷಣದಲ್ಲಿ ಜಗತ್ತೇ ಗಮನ ಸೆಳೆಯುವಂಥ ಕೆಲಸ ಮಾಡಿದೆ ಎಂದಿದ್ದಾರೆ.