ಹಾವೇರಿ, ಆ 29(DaijiworldNews/HR): ಶಾಲಾ-ಕಾಲೇಜು ಪ್ರಾರಂಭವಾದ ಬಳಿಕ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಹಾಸ್ಟೆಲ್ ಮತ್ತು ಕಾಲೇಜು ಆವರಣದಲ್ಲಿ ಮಾದಕವಸ್ತು ಪತ್ತೆಯಾದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ಹೊಣೆ ಮಾಡಿ, ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಸಿಬಿಯವರು 200 ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಂಡಿದ್ದು, ಮಾದಕ ದ್ರವ್ಯ ಜಾಲದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ವಿದೇಶಿಯರ ಪಾತ್ರ ಇರುವುದು ಪತ್ತೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿ, ಬೇರು ಸಮೇತ ಕಿತ್ತು ಹಾಕುತ್ತೇವೆ. ತಪ್ಪಿತಸ್ಥರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದರೆ ಜನ ಬಹುಶಃ ಮಣ್ಣು ತಿನ್ನುತ್ತಿದ್ದರೇನೋ, ಆದರೆ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವಿರುವುದರಿಂದ ಅಂಥ ಪರಿಸ್ಥಿತಿ ಬರುವುದಿಲ್ಲ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇನ್ನು ಇಡೀ ಜಗತ್ತಿಗೆ ಕೊರೊನಾ ಬಂದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲವನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ರಾಜ್ಯಕ್ಕೆ ಭಾರ ಆಗದಿರುವ ಒಂದು ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸೂಚಿಸಿದ್ದು, ಇನ್ನೆರಡು ದಿನಗಳಲ್ಲಿ ಲಿಖಿತ ರೂಪದಲ್ಲಿ ಬರಲಿದೆ ಎಂದು ತಿಳಿಸಿದ್ದಾರೆ.