ಲಖನೌ, ಸೆ 04 (DaijiworldNews/PY): ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಿಕೊಂಡು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಅಲ್ಲದೇ, ಅವರ ವಿರುದ್ದ ಸುಳ್ಳು ಪ್ರಕರಣಗಳನ್ನು ದಾಖಲು ಮಾಡುತ್ತಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದ ಸಂದರ್ಭ, ಬ್ರಾಹ್ಮಣರ ಹಾಗೂ ದಲಿತರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಬ್ರಾಹ್ಮಣ, ದಲಿತ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಅಲ್ಲದೇ, ಸುಖಾ ಸುಮ್ಮನೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಬೇಸರದ ಸಂಗತಿ ಎಂದಿದ್ದಾರೆ.
ಸಮಾಜವಾದಿ ಪಕ್ಷ ಆಡಳಿತದ ವೇಳೆ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಧಕ್ಕೆಯುಂಟು ಮಾಡಲಾಗಿತ್ತು. ಇದೇ ರೀತಿಯಾದ ಕೆಲಸ ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಮಾಡುತ್ತಿದೆ. ಅಲ್ಲದೇ, ವಿವಿಧ ಸಂಸ್ಥೆಗಳ ಹೆಸರನ್ನು ಕೂಡಾ ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.
ಅಂಬೆಡ್ಕರ್ ಅವರ ಪ್ರತಿಮೆಗೆ ಮೊದಲು ಹಾನಿ ಮಾಡಿದ್ದು ವಾರಣಾಸಿಯಲ್ಲಿ. ಇದೇ ರೀತಿಯಾದ ಘಟನೆ ಜೌನ್ಪರದಲ್ಲೂ ನಡೆದಿದ್ದು, ಇದು ಖಂಡನೀಯ. ಈ ವಿಷಯದಲ್ಲಿ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.