ಬೆಂಗಳೂರು, ಸೆ 6(DaijiworldNews/HR): ಕೊರೊನಾ ಸಂಕಷ್ಟದಿಂದ ಚೇತರಿಸಿಕೊಂಡು ಆರ್ಥಿಕವಾಗಿ ಮತ್ತೆ ಸಹಜಸ್ಥಿತಿಗೆ ಮರಳಿರುವ ದೇಶದ ಏಕೈಕ, ಮುಂಚೂಣಿಯ ರಾಜ್ಯ ಕರ್ನಾಟಕವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಅಮೆರಿಕದ ಕನ್ನಡ ಒಕ್ಕೂಟಗಳ ಸಂಘಟನೆ ಅಕ್ಕ ಏರ್ಪಡಿಸಿದ್ದ ಅಕ್ಕ ವರ್ಚುಯಲ್ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಡೀ ಜಗತ್ತನ್ನು ತೀವ್ರವಾಗಿ ಕಾಡುತ್ತಿರುವ ಕೋವಿಡ್ ನಿಂದ ಕರ್ನಾಟಕ ಧೃತಿಗೆಟ್ಟಿಲ್ಲ. ವಾಣಿಜ್ಯ, ಕೈಗಾರಿಕೆ, ಶಿಕ್ಷಣ, ಸಾರಿಗೆ ಸೇರಿದಂತೆ ಎಲ್ಲಾ ಕ್ಷೇತ್ರಗಳು ಸಹಜ ಸ್ಥಿತಿಗೆ ಮರಳಿವೆ. ಕೊರೊನಾ ಸಮಯದಲ್ಲೂ ತೆರಿಗೆ ಸಂಗ್ರಹದಲ್ಲೂ ರಾಜ್ಯ ಉತ್ತಮ ಸಾಧನೆ ಮಾಡಿದೆ ಎಂದರು.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಸೇರಿ ಕೆಲ ಮಹತ್ವದ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಯಿತಲ್ಲದೆ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಮಾಮೂಲಿ ಸ್ಥಿತಿಗೆ ತರಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿತು ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಈಗಾಗಲೇ ಆವಿಷ್ಕಾರ ಪ್ರಾಧಿಕಾರವನ್ನು ಸ್ಥಾಪನೆ ಮಾಡಿ ಐಟಿ-ಬಿಟಿ ಕ್ಷೇತ್ರಕ್ಕೆ ಶಕ್ತಿ ತುಂಬಲಾಗಿದೆ. ಅದೇ ರೀತಿ ಇಡೀ ದೇಶವನ್ನು ಬೆಂಗಳೂರು ಮೂಲಕ ನೋಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ರಾಷ್ಟ್ರೀಯ ಆವಿಷ್ಕಾರ ಮಿಷನ್ ಅನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಎಲ್ಲ ಪ್ರಯತ್ನಗಳನ್ನು ನಡೆಸಲಾಗುವುದು. ಅದಕ್ಕೆ ಬೇಕಿರುವ ಎಲ್ಲ ನೆರವನ್ನೂ ಕೇಂದ್ರ ಸರಕಾರದಿಂದ ಪಡೆಯಲಾಗುವುದು ಎಂದು ಇದೇ ವೇಳೆ ಅನಿವಾಸಿ ಕನ್ನಡಿಗರಿಗೆ ಅಶ್ವತ್ಥನಾರಾಯಣ ಮಾಹಿತಿ ನೀಡಿದರು.