ಬೆಂಗಳೂರು, ಸೆ 11 (DaijiworldNews/PY): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಬಿಎಸ್ವೈ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ದಿಢೀರ್ ಭೇಟಿಯಾಗಿದ್ದಾರೆ.
ಭೇಟಿಯ ಸಂದರ್ಭ ಹೆಚ್ಡಿಕೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಇತ್ತೀಚೆಗೆ ದಾಸರಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಆದ ಸಂಕಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದು ಮೈತ್ರಿ ಸರ್ಕಾರದ ನಂತರದ ಮೊದಲ ಭೇಟಿಯಾಗಿದ್ದು, ಈ ಭೇಟಿಯಲ್ಲಿ ಯಾವುದೇ ರೀತಿಯಾದ ರಾಜಕೀಯ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರವೇ ಆಗಬೇಕಾದ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಲು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ಭೇಟಿಯ ಸಂದರ್ಭ ಇಬ್ಬರೂ ಸುಮಾರು ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಭಾರಿ ಮಳೆಯಿಂದಾಗಿ ದಾಸರಹಳ್ಳಿ ಕ್ಷೇತ್ರದಲ್ಲಿ ಆಗಿರುವ ಹಾನಿಗೆ ಪರಿಹಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಬಂದಿರುವುದಾಗಿ ಹೇಳಿದರು.