ಬೆಂಗಳೂರು, ಸೆ 11 (DaijiworldNews/SM): ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ರಾಜ್ಯ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ನಿರಂತರ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಸರಕಾರಕ್ಕೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.