ಬೆಂಗಳೂರು, ಸೆ.12(DaijiworldNews/HR): ಈ ಭಾರಿ ಕರ್ನಾಟಕದಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ.
ಆಗಸ್ಟ್ ಮೊದಲ ವಾರದಲ್ಲಿ ಶುರುವಾದ ಮಳೆ ಬಿಟ್ಟು ಬಿಡದೆ ಸುರಿಯುತ್ತಿದೆ. ನೆರೆ ರಾಜ್ಯ ಮಹಾರಾಷ್ಟದಲ್ಲಿ ಸುರಿದ ಭಾರೀ ಮಳೆಯಿಂದ ಕೃಷ್ಣೆ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ನೆರೆ ಹಾವಳಿಯಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಆಧರಿಸಿ ರಾಜ್ಯ ಕಂದಾಯ ಇಲಾಖೆ 23 ಜಿಲ್ಲೆಗಳ 130 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ.
ಲಕ್ಷಾಂತರ ಎಕರೆ ಭೂಮಿಯಲ್ಲಿನ ಬೆಳೆಗಳು ನಾಶವಾಗಿದ್ದು, ಜನ-ಜಾನುವಾರುಗಳ ಪ್ರಾಣ ಹಾನಿಯಾಗಿದೆ. ಸುಮಾರು 2 ಕೋಟಿಗೂ ಅಧಿಕ ಜನರ ಬದುಕು ಬೀದಿಗೆ ಬಿದ್ದಿದೆ.
ಈ ಸಂಬಂಧ ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.