ಬೆಂಗಳೂರು , ಸೆ 12(DaijiworldNews/PY): ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ.ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದಿದ್ದಾರೆ.
ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು ತಿಳಿಸಿದ್ದಾರೆ.
2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದು ಹೇಳಿದ್ದಾರೆ.
ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದಿದ್ದಾರೆ.
ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ ಚಾಚಿ ಕೊಂಡಿರುವಂತ ನಾಲಿಗೆ ಸತತವು ನುಡಿ ಕಂಡ್ಯ ನಾಲಿಗೆ ಚಾಡಿ ಹೇಳಲು ಬೇಡ ನಾಲಿಗೆ ಪುರಂದರ ದಾಸರು ಎಂದು ಉಲ್ಲೇಖಿಸಿದ್ದಾರೆ.