ಹುಬ್ಬಳ್ಳಿ, ಸೆ.13(DaijiworldNews/HR): ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿಯಲ್ಲಿ ಲಾಬಿ ಜೋರಾಗಿ ನಡೆಯುತ್ತಿದೆ ಎಂದು ಜೆಡಿಎಸ್ ನಾಯಕ, ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಇನ್ನು ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ನಡೆಯುತ್ತಿದೆ. ಆದರೆ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು, ಬಿ.ಎಸ್. ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ. ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವ ವಿಚಾರವನ್ನು ಬಿಜೆಪಿಯ ಹಿರಿಯ ಮುಖಂಡರೊಬ್ಬರು ನನಗೆ ತಿಳಿಸಿರುವುದಾಗಿ ಹೊರಟ್ಟಿ ಹೇಳಿದ್ದಾರೆ.
ಜೆಡಿಎಸ್ ಶಾಸಕರು ಕೊಲಂಬೋದ ಕ್ಯಾಸಿನೊಗೆ ಹೋಗಿದ್ದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಹೊರಟ್ಟಿ, ಕ್ಯಾಸಿನೊಗೆ ರಾಜಕೀಯ ವಿಚಾರಗಳ ಕುರಿತು ಚರ್ಚೆ ಮಾಡಲು ಹೋಗಿದ್ದು ನಿಜ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂಬುದಾಗಿ ಹೇಳಿದ್ದಾರೆ.