ನವದೆಹಲಿ, ಸೆ 16 (DaijiworldNews/PY): ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದನೆ ಸಂಘಟನೆಗೆ ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಕೆಲವು ವ್ಯಕ್ತಿಗಳು ಸೇರಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ಜಿ. ಕಿಷಣ್ ರೆಡ್ಡಿ ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ತೆಲಂಗಾಣ, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಐಎಸ್ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ 17 ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಖಲಿಸಿದೆ ಹಾಗೂ 122 ಆರೋಪಿಗಳನ್ನು ಬಂಧಿಸಿದೆ ಎಂದು ಹೇಳಿದ್ದಾರೆ.
ವಿವಿಧ ರಾಜ್ಯಗಳ ವ್ಯಕ್ತಿಗಳು ಇಸ್ಲಾಮಿಕ್ ಸ್ಟೇಟ್ (ಐಎಸ್) ಗೆ ಸೇರ್ಪಡೆಯಾದ ಕೆಲವು ನಿದರ್ಶನಗಳು ಕೇಂದ್ರ ಮತ್ತು ರಾಜ್ಯ ಭದ್ರತಾ ಸಂಸ್ಥೆಗಳ ಗಮನಕ್ಕೆ ಬಂದಿವೆ. ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮು-ಕಾಶ್ಮೀರಗಳಲ್ಲಿ ಐಎಸ್ ಸಂಘಟನೆ ಹೆಚ್ಚು ಸಕ್ರಿಯವಾಗಿದೆ ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.
ಐಎಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಸೈಬರ್ ಜಾಗವನ್ನು ಈ ನಿಟ್ಟಿನಲ್ಲಿ ಸಂಬಂಧಪಟ್ಟ ಏಜೆನ್ಸಿಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.