ಯಾದಗಿರಿ, ಸೆ 16 (DaijiworldNews/PY): ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಪಟ್ಟಂತೆ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಸಿಕ್ಕಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಡ್ರಗ್ ಮಾಫಿಯಾದಲ್ಲಿ ರಾಜಕಾರಣಿಗಳ ಮಕ್ಕಳು ಪಾಲ್ಗೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ದೊರೆತರೆ ಅವರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ದ ಕ್ರಮ ತೆಗೆದುಕೊಳ್ಳಲು ಕಾನೂನು ಇದೆ ಎಂದು ತಿಳಿಸಿದರು.
ನೆರೆ ಪರಿಹಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಸಿಎಂ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಅಲ್ಲದೇ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲ್ಲ. ಈ ವಿಚಾರವಾಗಿ ಅಧಿವೇಶನ ಮುಗಿದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.