ಬೆಂಗಳೂರು, ಸೆ 18 (DaijiworldNews/PY): ಮುಖ್ಯಮಂತ್ರಿ ಬಿಎಸ್ವೈ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಿಎಸ್ವೈ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದಿದ್ದಾರೆ.
ಮುಖ್ಯಮಂತ್ರಿ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ, ಕೇಂದ್ರ ಸರ್ಕಾರ ನೀಡಿದ್ದು ರೂ.1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದು ಒತ್ತಾಯಿಸಿದ್ದಾರೆ.
15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದು ತಿಳಿಸಿದ್ಧಾರೆ.
ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನಿ ಮೋದಿ, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ.ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ಕೇಂದ್ರ ಸರ್ಕಾರದ ಕಣ್ಣು ತೆರೆಸಿ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದಿದ್ದಾರೆ.
ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ, ಸಾಲ ಎತ್ತಲು ರಾಜ್ಯ ಸರ್ಕಾರದ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಸಿಎಂ ಬಿಎಸ್ವೈ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ತಿಳಿಸಿದ್ದಾರೆ.