ಬೆಂಗಳೂರು, ಸೆ. 19 (DaijiworldNews/MB) : ಕೊರೊನಾ ನಿಯಮ ಮುರಿದ ಗಣ್ಯರ ಮೇಲೆ ಕ್ರಮ ಕೈಗೊಳ್ಳದಿರುವುದು ಜನರಿಗೆ ತಪ್ಪು ಸಂದೇಶ ನೀಡಿದೆ ಎಂದು ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ಕೊರೊನಾ ನಿಮಯಗಳ ಉಲ್ಲಂಘನೆ ಬಗ್ಗೆ ಹೈಕೋರ್ಟ್ಗೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಕೊರೊನಾ ಮಾರ್ಗಸೂಚಿ ಮುರಿದ ನಟರು ಹಾಗೂ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ. ಸರ್ಕಾರ ನಿಯಮ ಉಲ್ಲಂಘಿಸುವ ಎಲ್ಲರ ವಿರುದ್ದ ಕ್ರಮಕೈಗೊಳ್ಳಬೇಕು. ಕೊರೊನಾ ಪ್ರಕರಣಗಳು ಅಧಿಕವಾಗುತ್ತಿರುವ ಈ ಸಂದರ್ಭದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದ್ದು, ಸರ್ಕಾರ ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಕಡ್ಡಾಯಗೊಳಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಹಾಗೆಯೇ ಅಧಿಕಾರಿಗಳು ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳು ಸರಿಯಾದ ರೀತಿಯಲ್ಲಿ ಪಾಲಿಸಲಾಗುತ್ತಿದೆಯೇ ಎಂದು ನೋಡಿಕೊಳ್ಳಬೇಕು ಎಂದು ಕೂಡಾ ಸರ್ಕಾರಕ್ಕೆ ಆದೇಶಿಸಿದೆ.