ಬೆಂಗಳೂರು, ಸೆ. 20 (DaijiworldNews/MB) : ಕೊರೊನಾ ಸೋಂಕು ಪ್ರರಕಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಪ್ರಾಥಮಿಕ, ಪ್ರೌಢ ಮತ್ತು ಪದವಿ ತರಗತಿಗಳ ವಿದ್ಯಾರ್ಥಿಗಳು ಸೆಪ್ಟೆಂಬರ್ ಅಂತ್ಯದವರೆಗೆ ಶಿಕ್ಷಣ ಸಂಸ್ಥೆಗಳಿಗೆ ಹೋಗಬೇಕಾಗಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಸಾಂದರ್ಭಿಕ ಚಿತ್ರ
ಸೆಪ್ಟೆಂಬರ್ 21 ರಿಂದ ಒಂಬತ್ತನೇ ತರಗತಿಯಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ - ಕಾಲೇಜುಗಳಿಗೆ ಭೇಟಿ ನೀಡಲು ಸರ್ಕಾರವು ಅನುಮತಿ ನೀಡಿದ್ದು ಆದರೆ ಕೊರೊನಾ ಸೋಂಕು ಅಧಿಕವಾಗುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಭೇಟಿ ನೀಡುವುದು ಸುರಕ್ಷಿತವಲ್ಲ ಎಂಬ ಅಭಿಪ್ರಾಯ ಮೂಡಿಬಂದಿತ್ತು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ಅವರು, ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ಸೆಪ್ಟೆಂಬರ್ ಅಂತ್ಯದವರೆಗೆ ಹೋಗಬೇಕಾಗಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 21 ರಿಂದ ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳು ತರಗತಿಗಳನ್ನು ಪ್ರಾರಂಭಿಸಲಿವೆ ಎಂಬ ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲಾ - ಕಾಲೇಜುಗಳು ತೆರೆದಿರುತ್ತವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ. ಆದರೆ ಈ ಬಗ್ಗೆಗಿನ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ.