ನವದೆಹಲಿ, ಸೆ.21 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೆ.23 ರಂದು ಕರ್ನಾಟಕ ಸೇರಿ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದಾರೆ.
ಆಯಾ ರಾಜ್ಯಗಳಲ್ಲಿ ಕೊರೊನಾದಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದು, ಅದರ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮತ್ತಷ್ಟು ಪರಿಣಾಮಕಾರಿಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಕೋವಿಡ್ ಪ್ರಕರಣಗಳು 54 ಲಕ್ಷ ಗಡಿ ದಾಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಸೋಂಕಿನಿಂದ 86,752 ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಕೇಂದ್ರ ಸಚಿವರು ಮತ್ತು ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಈ ಹಿಂದೆ ಆ.11 ರಂದು ಸಭೆ ನಡೆಸಿದ್ದು, ಅದರಲ್ಲಿ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ ಸೇರಿದಂತೆ 10 ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.