ಬೆಂಗಳೂರು, ಸೆ. 25(DaijiworldNews/HR): ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಈ ವರ್ಷ 5,800 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದ್ದು, ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಇನ್ನು ಪ್ರಚಾರ ಮತ್ತು ಮತದಾನದ ಕಾರ್ಯವಿಧಾನಗಳ ವಿವರಗಳೊಂದಿಗೆ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ಎಸ್ಒಪಿಗಳನ್ನು ನೀಡಿತ್ತು.
ಕೊರೊನಾ ವೈರಸ್ ನಿಂದಾಗಿ ಈ ವರ್ಷ ಮೇ ಮತ್ತು ಜೂನ್ನಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಕೊನೆಗೊಂಡರೂ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ.