ಬೆಂಗಳೂರು, ಸೆ 26(DaijiworldNews/PY): ಸೆಪ್ಟೆಂಬರ್ 26 ಹಾಗೂ 27ರಂದು ಕರಾವಳಿ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಗದಗ, ಧಾರವಾಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ನೈರುತ್ಯ ಮಾರುತ ಸಕ್ರಿಯವಾಗಿರುವುದರಿಂದ, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಗುಡುಗು ಹಾಗೂ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಾರವಾರದಲ್ಲಿ 11 ಸೆಂ.ಮೀ ಮಳೆಯಾಗಿದ್ದರೆ, ಭಟ್ಕಳ 4 ಸೆಂ.ಮೀ, ಕೊಲ್ಲೂರು 3 ಸೆಂ.ಮೀ ಮಳೆಯಾಗಿದೆ.