ಬೆಂಗಳೂರು, ಸೆ. 26 (DaijiworldNews/MB) : ಭೂ ಸುಧಾರಣೆ ತಿದ್ದುಪಡಿಯ ಹಿಂದೆ ಕೋಟ್ಯಂತರ ರೂಪಾಯಿಗಳ ಹಗರಣವಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.
ತಿದ್ದುಪಡಿ ಮಸೂದೆಗಳು ರೈತ ವಿರೋಧಿ ಎಂದು ಸರಣಿ ಟ್ವೀಟ್ ಮೂಲಕ ಸರ್ಕಾರದ ವಿರುದ್ದ ಕಿಡಿಕಾರಿರುವ ಸಿದ್ದರಾಮಯ್ಯ ಅವರು, ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ ಎಂದು ಆರೋಪ ಮಾಡಿದ್ದಾರೆ.
ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಹೇಳಿದ್ದಾರೆ.
ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದಿದ್ದಾರೆ.
ತಿದ್ದುಪಡಿಗೆ ಒಳಗಾಗಿರುವ ಎಲ್ಲಾ ಸೆಕ್ಷನ್ ಗಳು ಭೂಮಲೀಕರ ದೌರ್ಜನ್ಯದಿಂದ ಸಣ್ಣ ರೈತರನ್ನು ರಕ್ಷಿಸುವ ಹಾಗೂ ಸಣ್ಣ ಪುಟ್ಟ ಹಿಡುವಳಿದಾರರ ಅಸಹಾಯಕತೆಯನ್ನು ಶ್ರೀಮಂತರು ಹಾಗು ಉದ್ಯಮಿಗಳು ದುರುಪಯೋಗ ಪಡಿಸಿಕೊಳ್ಳದಂತೆ ತಡೆಹಿಡಿಯುವ ಅವಕಾಶಗಳನ್ನು ಒದಗಿಸುತ್ತಿದ್ದವು ಎಂದು ಹೇಳಿದ್ದಾರೆ.
ಈ ಎಲ್ಲಾ ತಿದ್ದುಪಡಿಗಳ ಪರಿಣಾಮವಾಗಿ ಕಾರ್ಪೋರೇಟ್ ಸಂಸ್ಥೆಗಳು, ರಿಯಲ್ ಎಸ್ಟೇಟ್ ಕುಳಗಳು ಮತ್ತು ಶ್ರೀಮಂತರು ಸುಲಭವಾಗಿ ಕೃಷಿ ಭೂಮಿಯನ್ನು ಕಬಳಿಸಬಹುದು. ಸಣ್ಣ ರೈತಾಪಿಗಳು ಇನ್ನಷ್ಟು ವೇಗವಾಗಿ ಹಾಗೂ ಶಾಸನಬದ್ಧವಾಗಿ ಕೃಷಿಯಿಂದ ಹೊರದೂಡಲ್ಪಡುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ ಮಾಡಿರುವ ಅಂದಾಜು 60,000 ಎಕರೆ ಜಮೀನು ಒಳಗೊಂಡಿರುವ 13,814 ಪ್ರಕರಣಗಳು ರಾಜ್ಯದ ನ್ಯಾಯಾಲಯದಲ್ಲಿವೆ. ಪ್ರಸ್ತಾಪಿತ ತಿದ್ದುಪಡಿಯಿಂದ ಈ ಎಲ್ಲ ಪ್ರಕರಣಗಳು ರದ್ದಾಗಿ ಅಕ್ರಮಗಳೆಲ್ಲ ಸಕ್ರಮವಾಗಲಿವೆ. ಈ ಭೂಗಳ್ಳರನ್ನು ರಕ್ಷಿಸಲಿಕ್ಕಾಗಿಯೇ ತಿದ್ದುಪಡಿ ತರಲಾಗಿದೆ ಎಂದು ದೂರಿದ್ದಾರೆ.
ಭೂ ಸುಧಾರಣೆ ಕಾಯ್ದೆ ಉಲ್ಲಂಘಣೆಯ 13,814 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಭೂಮಿಗೆ ಚಿನ್ನದ ಬೆಲೆ ಇರುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿದೆ. ಈ ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಶಾಮೀಲಾಗಿ ಸರ್ಕಾರ ಈ ತಿದ್ದುಪಡಿ ತಂದಿದೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.
ಭೂ ಸುಧಾರಣೆ ತಿದ್ದುಪಡಿಯ ಹಿಂದೆ ಕೋಟ್ಯಂತರ ರೂಪಾಯಿಗಳ ಹಗರಣ ಇದೆ. ಅಂದಾಜು 60,000 ಎಕರೆ ಜಮೀನನ್ನು ಪಡೆಯಲಿರುವ ಭೂಗಳ್ಳರಿಂದ ಆಡಳಿತ ಪಕ್ಷದವರಿಗೆ ಏನು ಲಾಭ ಎನ್ನುವುದನ್ನು ನಾನು ವಿವರಿಸಲು ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಭೂ ಸುಧಾರಣಾ ಕಾಯ್ದೆಯಿಂದಾಗಿ ಭ್ರಷ್ಟಾಚಾರ ಹೆಚ್ಚಾಗಿದೆ, ಅಧಿಕಾರಿಗಳು ಲಂಚ ಹೊಡೆಯಲು ಅನುಕೂಲವಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಲಂಚ ಎಲ್ಲಿ ಇಲ್ಲ? ತಹಶೀಲ್ದಾರ್, ಪೊಲೀಸ್, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಇಲ್ಲವೇ? ನಿರ್ಮೂಲನೆ ಮಾಡಬೇಕಾಗಿರುವುದು ಲಂಚವನ್ನೇ? ಇಲ್ಲ ಕಾನೂನನ್ನೇ? ಎಂದು ಕೇಳಿದ್ದಾರೆ.
ಅಧಿಕಾರಿಗಳು ಲಂಚಕೋರರಾಗಿದ್ದಾರೆ ಎಂದರೆ ಸರ್ಕಾರ ಅವರನ್ನು ನಿಯಂತ್ರಿಸಲು ವಿಫಲವಾಗಿದೆ ಇಲ್ಲವೇ ಸರ್ಕಾರವೇ ಲಂಚಕೋರರ ಜೊತೆ ಶಾಮೀಲಾಗಿದೆ ಎಂದರ್ಥವಲ್ಲವೇ? ಇದನ್ನೂ ಸಮರ್ಥಿಸಿಕೊಳ್ಳಲು ನಾಚಿಕೆ ಆಗುವುದಿಲ್ವೇ?
ಇಡೀ ದೇಶ ಕೊರೊನಾ ಸೋಂಕಿನಿಂದ ತತ್ತರಿಸುತ್ತಿರುವಾಗ ತರಾತುರಿಯಲ್ಲಿ ಈ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ತರುವ ಅನಿವಾರ್ಯತೆ ಏನಿತ್ತು? ಇದನ್ನು ತರುವ ಮೊದಲು ರೈತರ ಜೊತೆ ಸಮಾಲೋಚನೆ ಮಾಡಿದ್ದೀರಾ? ವಿರೋಧ ಪಕ್ಷಗಳ ಜೊತೆ ಚರ್ಚೆ ಮಾಡಿದ್ದೀರಾ? ಕನಿಷ್ಠ ನಿಮ್ಮ ಪಕ್ಷದೊಳಗಾದರೂ ಚರ್ಚೆ ಮಾಡಿದ್ದೀರಾ?
ಈ ಭೂ ಸುಧಾರಣಾ ತಿದ್ದುಪಡಿಯಿಂದ ಕೃಷಿಗೇನು ತೊಂದರೆಯಾಗಲಾರದು ಎಂದು ಹೇಳುತ್ತೀರಲ್ಲಾ? ಕೃಷಿಯೇತರ ಬಳಕೆಗೆ ಕೃಷಿ ಭೂಮಿಯನ್ನು ಬಳಸಿಕೊಳ್ಳಬಾರದೆಂಬ ನಿರ್ಬಂಧವೇನಾದರೂ ತಿದ್ದುಪಡಿಯಲ್ಲಿದೆಯೇ? ಯಾಕೆ ಅದನ್ನು ಸೇರಿಸಿಲ್ಲ? ಇದರ ಹಿಂದಿನ ದುರುದ್ದೇಶ ಏನು? ಎಂದು ಪ್ರಶ್ನಿಸಿದ್ದಾರೆ.
ರೈತ ವಿರೋಧಿಯಾಗಿರುವ ಭೂ ಸುಧಾರಣಾ ತಿದ್ದುಪಡಿಯನ್ನು ನಾವು ಮಾತ್ರವಲ್ಲ, ಆಡಳಿತ ಪಕ್ಷದ ಸದಸ್ಯರಲ್ಲಿ ಆತ್ಮಸಾಕ್ಷಿ ಇದ್ದರೆ ಅವರೂ ವಿರೋಧಿಸಬೇಕು ಎಂದು ಮನವಿ ಮಾಡುತ್ತೇವೆ. ನಮ್ಮ ಹೋರಾಟ ಸದನಕ್ಕೆ ಮಾತ್ರ ಸೀಮಿತವಲ್ಲ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.