ನವದೆಹಲಿ, ಸೆ. 27 (DaijiworldNews/HR): ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್(82) ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನರಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ, ನಂತರ ರಾಜಕೀಯ ದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ಸಾವನ್ನು ಕೇಳಿ ದುಃಖವಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಸ್ವಂತ್ ಸಿಂಗ್ ಬಳಿಕ ರಾಜಕೀಯಕ್ಕೆ ಪ್ರವೇಶಿಸಿ ಸಂಸತ್ ಗೆ ಆಯ್ಕೆಯಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.