ಬೆಂಗಳೂರು, ಸೆ. 28 (DaijiworldNews/MB) : ಸಾಹಿತ್ಯ ವಿಮರ್ಶಕ ಡಾ. ಜಿ.ಎಸ್. ಅಮೂರ ಅವರು ಸೋಮವಾರ ನಿಧನರಾದರು.
95 ವರ್ಷದ ಅವರು ಬೆಂಗಳೂರಿನ ಪುತ್ರನ ನಿವಾಸದಲ್ಲಿ ವಾಸವಿದ್ದು ಸೋಮವಾರ ಬೆಳಗ್ಗೆ 5.30ಕ್ಕೆ ನಿಧನರಾದರು ಎಂದು ವರದಿ ತಿಳಿಸಿದೆ.
ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿರುವ ಅಮೂರ ಅವರಿಗೆ ಇತ್ತೀಚೆಗೆ ನೃಪತುಂಗ ಪ್ರಶಸ್ತಿ ಸಂದಿವೆ.
ಅಮೂರ ಅವರು 1925ರ ಮೇ 8ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ್ದು ಪ್ರಾಧ್ಯಾಪಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಅವರು ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸಿದ್ದರು.
ಇನ್ನು ಅಮೂರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, 'ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು, ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ. ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.