ಬೆಂಗಳೂರು, ಸೆ. 29 (DaijiworldNews/SM): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡುವ ಸಾಧ್ಯತೆ ಎದುರಾಗಿದೆ. ಶಿರಾ ಹಾಗೂ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆಯನ್ನು ಮುಂದೂಡಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಹಾರ ಮತ್ತು ಇತರೆ 56 ಕ್ಷೇತ್ರಗಳ ಉಪ ಚುನಾವಣೆಗಳ ಬಳಿಕ ಸಂಪುಟ ಪುನಾರಚನೆ ಮಾಡುವ ನಿರ್ಣಯ ಸಿಎಂ ಬಿಎಸ್ ವೈ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಪ ಚುನಾವಣೆಯ ಸಂದರ್ಭದಲ್ಲಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಅನುಮತಿ ನೀಡುವುದು ಅನುಮಾನ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಒಂದೆರಡು ದಿನಗಳಲ್ಲಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವ ಕಾರ್ಯಕ್ರಮ ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಪಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಎನ್ನಲಾಗಿದೆ. ಇದರಿಂದ ಸಚಿವಾಕಾಂಕ್ಷಿಗಳಿಗೆ ಮತ್ತಷ್ಟು ನಿರಾಸೆಯಾಗಿದೆ.