ಬೆಂಗಳೂರು,ಅ.01 (DaijiworldNews/HR): ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂಬುದಾಗಿ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಆರ್. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದರು.
ಇನ್ನು ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೊಂದೆ ನಮ್ಮ ಗುರಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಾಯಕರು ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದು, ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.