ನವದೆಹಲಿ, ಅ. 01 (DaijiworldNews/SM): ಉತ್ತರ ಪ್ರದೇಶದ ಹತ್ರಸ್ ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣ ದೇಶದೆಲ್ಲೆಡೆ ಸಂಚಲನ ಮೂಡಿಸುತ್ತಿದೆ. ಈ ನಡುವೆ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಹೊರಟ ರಾಹುಲ್ ಹಾಗೂ ಪ್ರೀಯಾಂಕಾ ಒಳಗೊಂಡ ಕಾರನ್ನು ಉತ್ತರ ಪ್ರದೇಶ ಪೊಲೀಸರು ಗ್ರೇಟರ್ ನೋಯ್ಡಾದಲ್ಲಿ ತಡೆದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ರಾಹುಲ್ ಕಾಲ್ನಡಿಗೆ ಮೂಲಕ ಹೊರಟಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು. ಇದೀಗ ಬಂಧನ ಖಂಡಿಸಿ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಹಲವು ಮುಖಂಡರು ಬಂಧನವನ್ನು ಖಂಡಿಸಿದ್ದಾರೆ.
ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಿಯಾಂಕಾ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆದಿತ್ಯನಾಥ್ ಸರಕಾರ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇನ್ನು ಹತ್ರಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣ ನಡೆದಿದ್ದು, ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಈ ಹೀನ ಕೃತ್ಯವನ್ನು ದೇಶವೇ ಖಂಡಿಸುತ್ತಿದ್ದು, ಎಲ್ಲೆಡೆ ಆಕ್ರೋಶ ತೀವ್ರಗೊಂಡಿದೆ.