ಬೆಳಗಾವಿ, ಅ. 02 (DaijiworldNews/MB) : ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದ್ದು ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರದ ಮಂತ್ರಿ ಸುರೇಶ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕಾಗಿತ್ತು. ಕ್ಷೇತ್ರದ ಜನರಿಗೆ ಅಂತಿಮ ದರ್ಶನ ಪಡೆಯುವ ಅವಕಾಶವನ್ನು ಕಲ್ಪಿಸಬೇಕಿತ್ತು. ಬೆಳಗಾವಿಯಲ್ಲಿ ಮಿಲಿಟರಿ ನೆಲೆ ಇದ್ದರೂ ಈ ಸರ್ಕಾರಕ್ಕೆ ಪಾರ್ಥಿವ ಶರೀರ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಆಗಲಿಲ್ಲ ಎಂದು ಹೇಳಿದ್ದಾರೆ.
ನಾಲ್ಕು ತಿಂಗಳ ಹಿಂದೆ ಏನೇನೋ ರಾಜಕಾರಣ ನಡೆದಿದ್ದು ಸುರೇಶ್ ಅಂಗಡಿ ಅವರನ್ನು ಮುಖ್ಯಮಂತ್ರಿ ಮಾಡುವ ಚರ್ಚೆಯೂ ನಡೆದಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಕುಟುಂಬಕ್ಕೆ ಸರ್ಕಾರ ನ್ಯಾಯ ನೀಡಿಲ್ಲ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಸರ್ಕಾರಕ್ಕೆ ಪ್ರವಾಹ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗಿಲ್ಲ ಎಂದು ಹೇಳಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜಿಲ್ಲಾ ನಾಯಕರಿಂದ ಅಭಿಪ್ರಾಯ ಸಂಗ್ರಹಿಸುತ್ತೇನೆ
ಇನ್ನು ಈ ಸಂದರ್ಭದಲ್ಲೇ ಹತ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಇಡೀ ಪ್ರಪಂಚಕ್ಕೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಪ್ಪುಚುಕ್ಕೆಯಾಗಿದ್ದು ಮನುಕುಲಕ್ಕೆಯೇ ಅಪಮಾನವಾಗಿದೆ ಎಂದು ಹೇಳಿದ್ದಾರೆ.