ನವದೆಹಲಿ, ಅ. 03 (DaijiworldNews/HR): ಉತ್ತರಪ್ರದೇಶದ ಹತ್ರಸ್ ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾಗೆ ಕೊನೆಗೂ ಉತ್ತರಪ್ರದೇಶ ಸರ್ಕಾರ ಅವಕಾಶ ನೀಡಿದೆ.
ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು.
ಮತ್ತೆ ಇಂದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಹತ್ರಾಸ್ ಗೆ ತೆರಳುತ್ತಿದ್ದ ಅವರ ಕಾರನ್ನು ದೆಹಲಿ- ನೋಯ್ಡಾ ಗಡಿಯಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಆದರೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಸ್ ಗೆ ತೆರಳಲು ಅನುಮತಿ ನೀಡಿದೆ.