ಕೋಲ್ಕತ್ತಾ, ಅ.5 (DaijiworldNews/HR): ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಮನೀಶ್ ಶುಕ್ಲನ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ನಡೆಸಿದ ಘಟನೆ ನಡೆದಿದೆ.
ಈ ಘಟನೆ ಆದಿತ್ಯವಾರ ಸಂಜೆ ನಡೆದಿದ್ದು, ಮನೀಶ್ ಶುಕ್ಲನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಹಿಂದೆ ಈ ಘಟನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನೇರ ಕಾರಣ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಪಟ್ಟುಹಿಡಿದಿದೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ, ಟಿಎಂಸಿ ನಾಯಕರು ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಅಸಹ್ಯಕರ ಸಂಗತಿಯಾಗಿದೆ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.