ಬೆಂಗಳೂರು, ಅ. 05(DaijiworldNews/PY): ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ ಸಿಬಿಐಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಡಿ.ಕೆ.ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತ. ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದಿದ್ದಾರೆ.
ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುವ ಸಿಬಿಐಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಕಣ್ಣಿಗೆ ಕಾಣಿಸುತ್ತಿಲ್ಲವೆ? ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುವುದ್ಯಾಕೆ? ಎಂದು ಕೇಳಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ.ಸುರೇಶ್ ಅವರ ಮೇಲೆ ಸಿಬಿಐ ದಾಳಿ ನಡೆಸಿದೆ. ಅಲ್ಲದೇ, ಡಿಕೆಶಿ ಅವರ ವಿರುದ್ದ ಎಫ್ಐಆರ್ ದಾಖಲಿಸಿದೆ.