ಮೈಸೂರು, ಅ.07 (DaijiworldNews/HR): ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಎಚ್.ಕುಸುಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರಕ್ಕೆ ಕುಸುಮಾ ಅವರೇ ಕಣಕ್ಕಿಳಿಸಲಿದ್ದು, ಅವರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದೇವೆ. ಆದ ಕಾರಣ ಅವರೇ ಅಭ್ಯರ್ಥಿಯಾಗಿ ಘೋಷಣೆಯಾಗುವ ಸಾಧ್ಯತೆ ಇದ್ದು, ಇಂದು ಅಭ್ಯರ್ಥಿ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ಹೇಳಿದ್ದಾರೆ.
ಇನ್ನು ಎಚ್. ಕುಸುಮಾ ಅವರ ಸ್ಪರ್ಧೆಗೆ ಯಾರು ಬೇಕಾದರೂ ವಿರೋಧ ವ್ಯಕ್ತಪಡಿಸಬಹುದು. ಆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಕೊಡಿ ಎಂದು ಕೇಳುವುದು ನಮ್ಮ ಕರ್ತವ್ವವಾಗಿದ್ದು, ವಿರೋಧ ಮಾಡುವವರನ್ನು ನಾವು ಬೇಡ ಎನ್ನುವುದಿಲ್ಲ ಎಂದರು.
ಇನ್ನು ಆರಾಜರಾಜೇಶ್ವರಿ ನಗರ ಹಾಗೂ ಶಿರಾ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ಡಿಕೆ ಶಿವಕುಮಾರ್ ಅವರ ಮನೆ ಮತ್ತು ಕಚೇರಿ ಮೇಲಿನ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿಬಿಐ, ಐಡಿ, ಇಡಿ ಸಂಸ್ಥೆಗಳಿಗೆ ಬಿಜೆಪಿ ನಾಯಕರೇ ಕಾಣುವುದಿಲ್ಲವೇ. ಇದೊಂದು ನಿಜಕ್ಕೂ ಅಚ್ಚರಿ ಎಂದು ಹೇಳಿದರು.