ನವದೆಹಲಿ, ಅ. 08 (DaijiworldNews/SM): ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನರಾದ ಬೆನ್ನಲ್ಲೇ ಇದೀಗ ಮತ್ತೋರ್ವ ಕೇಂದ್ರದ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಪಾಸ್ವಾನ್ ಅವರು ಕೇಂದ್ರದ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದರು.
74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾಸ್ವಾನ್ ಅವರು ಬರೋಬ್ಬರಿ ಎಂಟು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಬಾರಿ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಸೇವೆಯಲ್ಲಿದ್ದರು. ಅಲ್ಲದೆ, ಲೋಕ್ ಜನಶಕ್ತಿ ಪಾರ್ಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಲೋಕ್ ಜನಶಕ್ತಿ ಪಾರ್ಟಿ(ಎಲ್ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.